ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಲೂಕ
12ನೇ ಅಧ್ಯಾಯ
- Verse 1: ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.
- Verse 2: ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.
- Verse 3: ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.
- Verse 4: “ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
- Verse 5: ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.
- Verse 6: “ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.
- Verse 7: ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
- Verse 8: “ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
- Verse 9: ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.
- Verse 10: “ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.
- Verse 11: “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.
- Verse 12: ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.
- Verse 13: ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.
- Verse 14: ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.
- Verse 15: ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.
- Verse 16: ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.
- Verse 17: ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,
- Verse 18: ‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.
- Verse 19: ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.
- Verse 20: ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.
- Verse 21: “ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.
- Verse 22: ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.
- Verse 23: ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.
- Verse 24: ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!
- Verse 25: ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
- Verse 26: ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?
- Verse 27: ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
- Verse 28: ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!
- Verse 29: ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.
- Verse 30: ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
- Verse 31: ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.
- Verse 32: “ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.
- Verse 33: ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.
- Verse 34: ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.
- Verse 35: “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.
- Verse 36: ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.
- Verse 37: ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
- Verse 38: “ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.
- Verse 39: ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.
- Verse 40: ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.
- Verse 41: ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.
- Verse 42: ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.
- Verse 43: ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.
- Verse 44: ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
- Verse 45: “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ
- Verse 46: ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.
- Verse 47: “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.
- Verse 48: ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.
- Verse 49: “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.
- Verse 50: ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.
- Verse 51: ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
- Verse 52: ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.
- Verse 53: ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.
- Verse 54: ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.
- Verse 55: ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.
- Verse 56: ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?
- Verse 57: “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?
- Verse 58: ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.
- Verse 59: ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.