ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಯೆಶಾಯ
35ನೇ ಅಧ್ಯಾಯ
- Verse 1: ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.
- Verse 2: ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.
- Verse 3: ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.
- Verse 4: ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”
- Verse 5: ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.
- Verse 6: ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.
- Verse 7: ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.
- Verse 8: ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.
- Verse 9: ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.
- Verse 10: ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.