P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
99ನೇ ಅಧ್ಯಾಯ
- Verse 1: ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II
- Verse 2: ಸಿಯೋನಿನಲಿ ಪ್ರಭು ಶ್ರೇಷ್ಠನು I ರಾಷ್ಟ್ರಗಳಲ್ಲೆಲ್ಲಾ ಉತ್ಕೃಷ್ಠನು II
- Verse 3: ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II
- Verse 4: ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II
- Verse 5: ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II
- Verse 6: ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II
- Verse 7: ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II
- Verse 8: ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II
- Verse 9: ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II