पवित्र बाइबिल
ಹೊಸ ಒಡಂಬಡಿಕೆ
1 ಕೊರಿಂಥಿಯರಿಗೆ
3ನೇ ಅಧ್ಯಾಯ
- Verse 1: ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.
- Verse 2: ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.
- Verse 3: ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?
- Verse 4: ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು?
- Verse 5: ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.
- Verse 6: ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.
- Verse 7: ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.
- Verse 8: ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.
- Verse 9: ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.
- Verse 10: ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.
- Verse 11: ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು.
- Verse 12: ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.
- Verse 13: ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.
- Verse 14: ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.
- Verse 15: ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ.
- Verse 16: ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.
- Verse 17: ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.
- Verse 18: ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.
- Verse 19: ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ
- Verse 20: “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?
- Verse 21: ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.
- Verse 22: ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.
- Verse 23: ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.