ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಮತ್ತಾಯ
25ನೇ ಅಧ್ಯಾಯ
- Verse 1: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.
- Verse 2: ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.
- Verse 3: ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
- Verse 4: ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
- Verse 5: ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.
- Verse 6: “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.
- Verse 7: ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.
- Verse 8: ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.
- Verse 9: ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.
- Verse 10: ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.
- Verse 11: ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.
- Verse 12: ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.
- Verse 13: ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.
- Verse 14: “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.
- Verse 15: ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.
- Verse 16: ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.
- Verse 17: ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.
- Verse 18: ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ.
- Verse 19: ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.
- Verse 20: ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.
- Verse 21: ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.
- Verse 22: ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.
- Verse 23: ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.
- Verse 24: ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;
- Verse 25: ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.
- Verse 26: “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?
- Verse 27: ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.
- Verse 28: ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ.
- Verse 29: ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.
- Verse 30: ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.
- Verse 31: “ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.
- Verse 32: ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.
- Verse 33: ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು.
- Verse 34: ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.
- Verse 35: ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ.
- Verse 36: ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.
- Verse 37: ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?
- Verse 38: ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು?
- Verse 39: ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.
- Verse 40: ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.
- Verse 41: “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
- Verse 42: ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;
- Verse 43: ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.
- Verse 44: ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.
- Verse 45: ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.
- Verse 46: “ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.