P. O. C ബൈബിള്
ಹೊಸ ಒಡಂಬಡಿಕೆ
ಯೊವಾನ್ನ
6ನೇ ಅಧ್ಯಾಯ
- Verse 1: ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.
- Verse 2: ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.
- Verse 3: ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು.
- Verse 4: ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು.
- Verse 5: ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.
- Verse 6: ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು.
- Verse 7: ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.
- Verse 8: ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು,
- Verse 9: “ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.
- Verse 10: ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು.
- Verse 11: ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
- Verse 12: ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.
- Verse 13: ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು.
- Verse 14: ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.
- Verse 15: ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.
- Verse 16: ಸಾಯಂಕಾಲವಾದ ಮೇಲೆ ಯೇಸು ಸ್ವಾಮಿಯ ಶಿಷ್ಯರು ಸರೋವರಕ್ಕೆ ಹೋಗಿ
- Verse 17: ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
- Verse 18: ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು.
- Verse 19: ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು.
- Verse 20: ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು.
- Verse 21: ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.
- Verse 22: ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.
- Verse 23: ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.
- Verse 24: ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.
- Verse 25: ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.
- Verse 26: ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.
- Verse 27: ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.
- Verse 28: ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.
- Verse 29: ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.
- Verse 30: ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?
- Verse 31: ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.
- Verse 32: ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.
- Verse 33: ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.
- Verse 34: ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು.
- Verse 35: ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.
- Verse 36: ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.
- Verse 37: ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.
- Verse 38: ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.
- Verse 39: ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.
- Verse 40: ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.
- Verse 41: “ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.
- Verse 42: ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
- Verse 43: ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ.
- Verse 44: ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.
- Verse 45: ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.
- Verse 46: ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.
- Verse 47: ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
- Verse 48: ಜೀವದಾಯಕ ರೊಟ್ಟಿ ನಾನೇ.
- Verse 49: ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ, ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು.
- Verse 50: ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.
- Verse 51: ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.
- Verse 52: ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.
- Verse 53: ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.
- Verse 54: ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.
- Verse 55: ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.
- Verse 56: ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.
- Verse 57: ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.
- Verse 58: ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.
- Verse 59: ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.
- Verse 60: ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.
- Verse 61: ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?
- Verse 62: ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?
- Verse 63: ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.
- Verse 64: ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)
- Verse 65: “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.
- Verse 66: ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.
- Verse 67: ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು.
- Verse 68: ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.
- Verse 69: ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.
- Verse 70: ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.
- Verse 71: ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.