ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಮತ್ತಾಯ
5ನೇ ಅಧ್ಯಾಯ
- Verse 1: ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.
- Verse 2: ಆಗ ಯೇಸು ಇಂತೆಂದು ಪ್ರಬೋಧಿಸಿದರು.
- Verse 3: “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.
- Verse 4: ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.
- Verse 5: ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.
- Verse 6: ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.
- Verse 7: ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.
- Verse 8: ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.
- Verse 9: ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.
- Verse 10: ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”
- Verse 11: “ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.
- Verse 12: ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”
- Verse 13: “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”
- Verse 14: “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.
- Verse 15: ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.
- Verse 16: ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”
- Verse 17: “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ.
- Verse 18: ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
- Verse 19: ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
- Verse 20: ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”
- Verse 21: “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
- Verse 22: ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.
- Verse 23: ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
- Verse 24: ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”
- Verse 25: “ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!
- Verse 26: ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”
- Verse 27: “ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;
- Verse 28: ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.
- Verse 29: ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.
- Verse 30: ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.”
- Verse 31: “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.
- Verse 32: ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”
- Verse 33: “ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.
- Verse 34: ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;
- Verse 35: ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;
- Verse 36: ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.
- Verse 37: ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”
- Verse 38: “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ.
- Verse 39: ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.
- Verse 40: ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು.
- Verse 41: ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;
- Verse 42: ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”
- Verse 43: “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.
- Verse 44: ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.
- Verse 45: ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.
- Verse 46: ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?
- Verse 47: ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?
- Verse 48: ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”