P. O. C ബൈബിള്
ಹೊಸ ಒಡಂಬಡಿಕೆ
ಮತ್ತಾಯ
20ನೇ ಅಧ್ಯಾಯ
- Verse 1: “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.
- Verse 2: ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.
- Verse 3: ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.
- Verse 4: ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.
- Verse 5: ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ.
- Verse 6: ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.
- Verse 7: ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.
- Verse 8: “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.
- Verse 9: ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
- Verse 10: ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.
- Verse 11: ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.
- Verse 12: ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.
- Verse 13: ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?
- Verse 14: ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.
- Verse 15: ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.
- Verse 16: ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.
- Verse 17: ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,
- Verse 18: “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು.
- Verse 19: ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.
- Verse 20: ಆಗ ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು.
- Verse 21: “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.
- Verse 22: ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.
- Verse 23: ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.
- Verse 24: ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
- Verse 25: ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.
- Verse 26: ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.
- Verse 27: ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ.
- Verse 28: ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
- Verse 29: ಅವರೆಲ್ಲರೂ ಜೆರಿಕೊ ಪಟ್ಟಣವನ್ನು ಬಿಟ್ಟು ಹೊರಟರು. ಜನರ ದೊಡ್ಡ ಗುಂಪು ಯೇಸುಸ್ವಾಮಿಯನ್ನು ಹಿಂಬಾಲಿಸಿತು.
- Verse 30: ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.
- Verse 31: ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.
- Verse 32: ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.
- Verse 33: ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು.
- Verse 34: ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.