पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
47ನೇ ಅಧ್ಯಾಯ
- Verse 1: ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II
- Verse 2: ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II
- Verse 3: ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II
- Verse 4: ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II
- Verse 5: ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II
- Verse 6: ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II
- Verse 7: ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II
- Verse 8: ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
- Verse 9: ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II