ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಮತ್ತಾಯ
3ನೇ ಅಧ್ಯಾಯ
- Verse 1: ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.
- Verse 2: “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.
- Verse 3: “ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.
- Verse 4: ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.
- Verse 5: ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;
- Verse 6: ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.
- Verse 7: ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?
- Verse 8: ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.
- Verse 9: ‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.
- Verse 10: ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.
- Verse 11: ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.
- Verse 12: ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.
- Verse 13: ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು.
- Verse 14: “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.
- Verse 15: ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.
- Verse 16: ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.
- Verse 17: ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.