P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
24ನೇ ಅಧ್ಯಾಯ
1 : ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II
2 : ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II
3 : ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II
4 : ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II
5 : ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II
6 : ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II
7 : ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II
8 : ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II
9 : ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II
10 : ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II