வேதாகமம்
ಹಳೆಯ ಒಡಂಬಡಿಕೆ
ಯೋಬನ ಗ್ರಂಥ
1ನೇ ಅಧ್ಯಾಯ
1 : ‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.
2 : ಆತನಿಗೆ ಏಳು ಗಂಡು, ಮೂರು ಹೆಣ್ಣು ಮಕ್ಕಳು ಇದ್ದರು.
3 : ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.
4 : ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.
5 : ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
6 : ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.
7 : ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.
8 : ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.
9 : ಅದಕ್ಕೆ ಸೈತಾನನು ಹೀಗೆ ಎಂದನು : “ಲಾಭವಿಲ್ಲದೆ ಯೋಬನು ನಿಮ್ಮಲ್ಲಿ ಭಯಭಕ್ತಿ ಇಟ್ಟಿದ್ದಾನೆಯೇ?
10 : ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.
11 : ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.
12 : ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.
13 : ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣಮಾಡುತ್ತಿದ್ದರು.
14 : ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು; ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.
15 : ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.
16 : ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.
17 : ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.
18 : ಅವನು ವರದಿಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು, “ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ ಮನೆಯಲ್ಲಿ ಔತಣದಲ್ಲಿದ್ದರು.
19 : ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.
20 : ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:
21 : ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.
22 : ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.