வேதாகமம்
ಹೊಸ ಒಡಂಬಡಿಕೆ
ಮತ್ತಾಯ
14ನೇ ಅಧ್ಯಾಯ
1 : ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.
2 : ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು
3 : ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.
4 : ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.
5 : ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.
6 : ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.
7 : ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು.
8 : ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.
9 : ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು.
10 : ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;
11 : ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
12 : ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.
13 : ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.
14 : ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.
15 : ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು.
16 : ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು.
17 : ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು.
18 : ಯೇಸು, “ಅವನ್ನು ಇಲ್ಲಿಗೆ ತನ್ನಿ,” ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು.
19 : ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.
20 : ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು.
21 : ಊಟ ಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.
22 : ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.
23 : ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.
24 : ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.
25 : ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.
26 : ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು.
27 : ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.
28 : ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು
29 : ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.
30 : ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.
31 : ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.
32 : ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.
33 : ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.
34 : ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು.
35 : ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.
36 : ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.