पवित्र बाइबिल
ಹೊಸ ಒಡಂಬಡಿಕೆ
ಮತ್ತಾಯ
6ನೇ ಅಧ್ಯಾಯ
- Verse 1: “ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.
- Verse 2: ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
- Verse 3: ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.
- Verse 4: ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
- Verse 5: “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.
- Verse 6: ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”
- Verse 7: “ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
- Verse 8: ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.
- Verse 9: ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:
- Verse 10: ‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.
- Verse 11: ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
- Verse 12: ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
- Verse 13: ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’
- Verse 14: “ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.
- Verse 15: ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”
- Verse 16: “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
- Verse 17: ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.
- Verse 18: ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”
- Verse 19: “ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.
- Verse 20: ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.
- Verse 21: ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”
- Verse 22: “ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.
- Verse 23: ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”
- Verse 24: “ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”
- Verse 25: “ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?
- Verse 26: ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?
- Verse 27: ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
- Verse 28: ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.
- Verse 29: ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
- Verse 30: ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?
- Verse 31: ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.
- Verse 32: ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
- Verse 33: ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.
- Verse 34: ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”