పరిశుద్ధ గ్రంథము
ಹಳೆಯ ಒಡಂಬಡಿಕೆ
1 ಸಮುವೇಲನು
1ನೇ ಅಧ್ಯಾಯ
1 : ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.
2 : ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಒಬ್ಬಳು ಹನ್ನ. ಇನ್ನೊಬ್ಬಳು ಪೆನಿನ್ನ. ಪೆನಿನ್ನಗೆ ಮಕ್ಕಳು ಇದ್ದರು; ಆದರೆ ಹನ್ನಳಿಗೆ ಇರಲಿಲ್ಲ.
3 : ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.
4 : ಎಲ್ಕಾನನು ಬಲಿಯರ್ಪಿಸಿದಾಗಲೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲ ಗಂಡು-ಹೆಣ್ಣು ಮಕ್ಕಳಿಗೂ ಬಲಿಭೋಜನದ ಒಂದೊಂದು ಭಾಗವನ್ನು ಕೊಡುತ್ತಿದ್ದನು.
5 : ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.
6 : ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.
7 : ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.
8 : ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು
9 : ಶಿಲೋವಿನಲ್ಲಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಸರ್ವೇಶ್ವರನ ಮಂದಿರಕ್ಕೆ ಬಂದಳು. ಯಾಜಕ ಏಲಿಯನು ಆ ಮಂದಿರದ ದ್ವಾರದ ನಿಲುವು ಪಟ್ಟಿಗಳ ಬಳಿ ಒಂದು ಪೀಠದ ಮೇಲೆ ಕುಳಿತಿದ್ದನು.
10 : ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:
11 : “ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”
12 : ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.
13 : ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು, ಶಬ್ದ ಮಾತ್ರ ಕೇಳಿಸುತ್ತಿರಲಿಲ್ಲ. ಆದುದರಿಂದ ಇವಳು ಕುಡಿದಿರಬೇಕೆಂದು ತಿಳಿದು,
14 : “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೆ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟುಹೋಗಲಿ,” ಎಂದನು.
15 : ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
16 : ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.
17 : ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.
18 : “ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.
19 : ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.
20 : ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.
21 : ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ.
22 : ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.
23 : ಗಂಡನಾದ ಎಲ್ಕಾನನು, “ಹಾಗೆಯೇ ಆಗಲಿ; ನಿನಗೆ ಸರಿತೋರಿದಂತೆ ಮಾಡು. ಮಗು ಮೊಲೆಬಿಡುವವರೆಗೆ ಮನೆಯಲ್ಲೇ ಇರು. ಸರ್ವೇಶ್ವರ ನಿನ್ನ ಮಾತನ್ನು ದೃಢವಾಗಿಸಲಿ,” ಎಂದನು. ಮಗು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಆರೈಕೆ ಮಾಡಿದಳು.
24 : ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.
25 : ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು.
26 : ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.
27 : ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.
28 : ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.