ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಮತ್ತಾಯ
16ನೇ ಅಧ್ಯಾಯ
- Verse 1: ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.
- Verse 2: ಅದಕ್ಕೆ ಯೇಸು, “ಸಂಜೆಯಾದಾಗ ನೀವು ‘ಹವಾಮಾನವು ಹಿತಕರವಾಗಿರುತ್ತದೆ, ಏಕೆಂದರೆ ಆಕಾಶ ಕೆಂಪಗಿದೆ ಎನ್ನುತ್ತೀರಿ.’ ಬೆಳಗ್ಗೆ, ‘ಈ ದಿನ ಗಾಳಿಮಳೆ ಇರುತ್ತದೆ. ಏಕೆಂದರೆ ಕೆಂಪಾದ ಆಕಾಶದಲ್ಲಿ ಮೋಡ ಮುಚ್ಚಿದೆ’ ಎನ್ನುತ್ತೀರಿ.
- Verse 3: ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.
- Verse 4: ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.
- Verse 5: ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಸರೋವರದ ಆಚೆ ದಡಕ್ಕೆ ಬಂದರು.
- Verse 6: ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.
- Verse 7: ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.
- Verse 8: ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?
- Verse 9: ಏನು, ನಿಮಗಿನ್ನೂ ಅರಿವಿಲ್ಲವೆ? ಐದು ರೊಟ್ಟಿಗಳಿಂದ ನಾನು ಐದು ಸಾವಿರ ಜನರನ್ನು ತೃಪ್ತಿಪಡಿಸಿದ್ದು ನಿಮಗೆ ಜ್ಞಾಪಕವಿಲ್ಲವೆ? ಆಗ ಉಳಿದುದ್ದನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿಸಿಕೊಂಡಿರಿ?
- Verse 10: ಅಲ್ಲದೆ ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ, ಉಳಿದುದನ್ನು ಎಷ್ಟು ಕುಕ್ಕೆಗಳಲ್ಲಿ ತುಂಬಿಸಿಕೊಂಡಿರಿ?
- Verse 11: ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.
- Verse 12: ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.
- Verse 13: ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.
- Verse 14: ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.
- Verse 15: ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.
- Verse 16: ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.
- Verse 17: ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.
- Verse 18: ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.
- Verse 19: ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”
- Verse 20: ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.
- Verse 21: ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.
- Verse 22: ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.
- Verse 23: ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.
- Verse 24: ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Verse 25: ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Verse 26: ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?
- Verse 27: ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.
- Verse 28: ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.