पवित्र बाइबिल
ಹಳೆಯ ಒಡಂಬಡಿಕೆ
ಯೆಜೆಕಿಯೇಲನು
10ನೇ ಅಧ್ಯಾಯ
- Verse 1: ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
- Verse 2: ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
- Verse 3: ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.
- Verse 4: ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.
- Verse 5: ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.
- Verse 6: ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
- Verse 7: ಆಗ ಒಬ್ಬ ಕೆರೂಬಿಯು ಇತರ ಕೆರೂಬಿಯರ ನಡುವೆ ಕೈಚಾಚಿ, ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು, ನಾರಿನ ಬಟ್ಟೆತೊಟ್ಟವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
- Verse 8: (ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.)
- Verse 9: ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.
- Verse 10: ಅವುಗಳ ರೂಪ ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.
- Verse 11: ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
- Verse 12: ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
- Verse 13: (ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.)
- Verse 14: ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.
- Verse 15: ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.
- Verse 16: ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.
- Verse 17: ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
- Verse 18: ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.
- Verse 19: ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.
- Verse 20: ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
- Verse 21: ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;
- Verse 22: ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.