P. O. C ബൈബിള്
ಹಳೆಯ ಒಡಂಬಡಿಕೆ
ಧರ್ಮೋಪದೇಶಕಾಂಡ
34ನೇ ಅಧ್ಯಾಯ
- Verse 1: ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,
- Verse 2: ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು,
- Verse 3: ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.
- Verse 4: ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.
- Verse 5: ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.
- Verse 6: ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು.
- Verse 7: ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.
- Verse 8: ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.
- Verse 9: ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
- Verse 10: ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.
- Verse 11: ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.
- Verse 12: ಇಸ್ರಯೇಲರ ಕಣ್ಮುಂದೆ ವಿಶೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ.