ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಮತ್ತಾಯ
7ನೇ ಅಧ್ಯಾಯ
- Verse 1: “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.
- Verse 2: ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.
- Verse 3: ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?
- Verse 4: ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?
- Verse 5: ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”
- Verse 6: “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”
- Verse 7: “ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
- Verse 8: ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.
- Verse 9: ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?
- Verse 10: ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು?
- Verse 11: ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”
- Verse 12: “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”
- Verse 13: “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.
- Verse 14: ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”
- Verse 15: “ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.
- Verse 16: ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?
- Verse 17: ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.
- Verse 18: ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.
- Verse 19: ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
- Verse 20: ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.”
- Verse 21: “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.
- Verse 22: ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.
- Verse 23: ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”
- Verse 24: “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.
- Verse 25: ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.
- Verse 26: ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.
- Verse 27: ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”
- Verse 28: ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.
- Verse 29: ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.