ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಲೂಕ
10ನೇ ಅಧ್ಯಾಯ
- Verse 1: ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.
- Verse 2: ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.
- Verse 3: ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
- Verse 4: ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.
- Verse 5: ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.
- Verse 6: ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.
- Verse 7: ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
- Verse 8: “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.
- Verse 9: ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
- Verse 10: ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ,
- Verse 11: ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.
- Verse 12: ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.
- Verse 13: “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.
- Verse 14: ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.
- Verse 15: ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.
- Verse 16: ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.
- Verse 17: ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.
- Verse 18: ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.
- Verse 19: ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.
- Verse 20: ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.
- Verse 21: ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
- Verse 22: ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.
- Verse 23: ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.
- Verse 24: ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
- Verse 25: ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.
- Verse 26: ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.
- Verse 27: ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.
- Verse 28: ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.
- Verse 29: ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.
- Verse 30: ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.
- Verse 31: ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.
- Verse 32: ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.
- Verse 33: ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,
- Verse 34: ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.
- Verse 35: ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
- Verse 36: “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.
- Verse 37: ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
- Verse 38: ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.
- Verse 39: ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.
- Verse 40: ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.
- Verse 41: ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.
- Verse 42: ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.