ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
ಯೊವಾನ್ನ
9ನೇ ಅಧ್ಯಾಯ
- Verse 1: ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.
- Verse 2: ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.
- Verse 3: ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.
- Verse 4: ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.
- Verse 5: ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.
- Verse 6: ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.
- Verse 7: (’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.
- Verse 8: ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.
- Verse 9: “ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು.
- Verse 10: ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.
- Verse 11: ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.
- Verse 12: ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು, ಉತ್ತರವಾಗಿ “ನಾನರಿಯೆ,” ಎಂದನು.
- Verse 13: ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.
- Verse 14: ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.
- Verse 15: ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು.
- Verse 16: ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.
- Verse 17: ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.
- Verse 18: ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.
- Verse 19: ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು.
- Verse 20: ಅದಕ್ಕೆ ಅವನ ತಂದೆತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣು ಕೊಟ್ಟವರು ಯಾರೆಂದೂ ನಮಗೆ ತಿಳಿಯದು.
- Verse 21: ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.
- Verse 22: ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.
- Verse 23: ಆದುದರಿಂದಲೇ, “ಅವನು ಪ್ರಾಯದವನು, ಅವನನ್ನೇ ಕೇಳಿ,” ಎಂದು ಅವನ ತಂದೆತಾಯಿಗಳು ಹೇಳಿದ್ದು.
- Verse 24: ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.
- Verse 25: ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ, ಇಷ್ಟುಮಾತ್ರ ಬಲ್ಲೆ, ಎಂದು ಹೇಳಿದನು.
- Verse 26: “ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣುಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು.
- Verse 27: ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.
- Verse 28: ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು.
- Verse 29: ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.
- Verse 30: ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.
- Verse 31: ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.
- Verse 32: ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.
- Verse 33: ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು.
- Verse 34: ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.
- Verse 35: ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.
- Verse 36: ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು.
- Verse 37: ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು.
- Verse 38: “ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.
- Verse 39: ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.
- Verse 40: ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.
- Verse 41: ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.