P. O. C ബൈബിള്
ಹೊಸ ಒಡಂಬಡಿಕೆ
2 ಥೆಸಲೋನಿಯರಿಗೆ
3ನೇ ಅಧ್ಯಾಯ
- Verse 1: ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.
- Verse 2: ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.
- Verse 3: ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.
- Verse 4: ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.
- Verse 5: ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.
- Verse 6: ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.
- Verse 7: ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ.
- Verse 8: ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.
- Verse 9: ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.
- Verse 10: ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.
- Verse 11: ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದುಬಂದಿದೆ.
- Verse 12: ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.
- Verse 13: ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.
- Verse 14: ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.
- Verse 15: ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.
- Verse 16: ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!
- Verse 17: ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!
- Verse 18: ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!