P. O. C ബൈബിള്
ಹೊಸ ಒಡಂಬಡಿಕೆ
ಮತ್ತಾಯ
9ನೇ ಅಧ್ಯಾಯ
- Verse 1: ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.
- Verse 2: ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
- Verse 3: ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.
- Verse 4: ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?
- Verse 5: ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?
- Verse 6: ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.
- Verse 7: ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.
- Verse 8: ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.
- Verse 9: ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.
- Verse 10: ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.
- Verse 11: ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.
- Verse 12: ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.
- Verse 13: ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
- Verse 14: ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.
- Verse 15: ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.
- Verse 16: “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
- Verse 17: ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.
- Verse 18: ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.
- Verse 19: ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು.
- Verse 20: ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.
- Verse 21: ‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.
- Verse 22: ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.
- Verse 23: ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,
- Verse 24: “ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು.
- Verse 25: ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು.
- Verse 26: ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.
- Verse 27: ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.
- Verse 28: ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.
- Verse 29: ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು.
- Verse 30: ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.
- Verse 31: ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.
- Verse 32: ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.
- Verse 33: ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.
- Verse 34: ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.
- Verse 35: ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.
- Verse 36: ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.
- Verse 37: ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.
- Verse 38: ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.