ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
34ನೇ ಅಧ್ಯಾಯ
1 : ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II
2 : ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I
3 : ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II
4 : ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II
5 : ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II
6 : ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II
7 : ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II
8 : ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II
9 : ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
10 : ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II
11 : ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II
12 : ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II
13 : ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II
14 : ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II
15 : ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II
16 : ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II
17 : ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II
18 : ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II
19 : ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II
20 : ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II
21 : ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II
22 : ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II